ಚಾಮರಾಜನಗರ: ರೈತ ಸಂಘಟನೆಗಳ ತೀವ್ರ ವಿರೋಧ ಹಾಗೂ ಎಚ್ಚರಿಕೆಯ ಹಿನ್ನೆಲೆಯಲ್ಲಿ ಚಾಮರಾಜನಗರದ ಚಿತ್ರಮಂದಿರವೊಂದರಲ್ಲಿ ಪ್ರದರ್ಶನಗೊಳ್ಳುತ್ತಿದ್ದ ‘ಜನನಾಯಗನ್’ ಸಿನಿಮಾದ ಪ್ರದರ್ಶನವನ್ನು ದಿಢೀರ್ ಆಗಿ ರದ್ದುಗೊಳಿಸಿದ ಘಟನೆ ನಡೆದಿದೆ.

ಗಡಿಜಿಲ್ಲೆ ಚಾಮರಾಜನಗರದ ಚಿತ್ರಮಂದಿರದಲ್ಲಿ ಈ ಸಿನಿಮಾ ಬಿಡುಗಡೆಯಾಗಿತ್ತು. ಆದರೆ, ಈ ಚಿತ್ರದ ಪ್ರದರ್ಶನಕ್ಕೆ ರೈತ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಕನ್ನಡಿಗರ ಹಾಗೂ ರಾಜ್ಯದ ರೈತರ ಹಿತಾಸಕ್ತಿಗೆ ವಿರುದ್ಧವಾದ ನಿಲುವುಗಳ ಹಿನ್ನೆಲೆಯಲ್ಲಿ, ಈ ಚಿತ್ರವನ್ನು ಯಾವುದೇ ಕಾರಣಕ್ಕೂ ಇಲ್ಲಿ ಪ್ರದರ್ಶನ ಮಾಡಬಾರದು ಎಂದು ರೈತ ಮುಖಂಡರು ಪಟ್ಟು ಹಿಡಿದಿದ್ದರು.

ಚಿತ್ರಮಂದಿರದ ಬಳಿ ಜಮಾಯಿಸಿದ ರೈತ ಸಂಘಟನೆಯ ಕಾರ್ಯಕರ್ತರು, ತಕ್ಷಣವೇ ಚಿತ್ರದ ಪ್ರದರ್ಶನವನ್ನು ಸ್ಥಗಿತಗೊಳಿಸಬೇಕು. ಇಲ್ಲವಾದಲ್ಲಿ ಚಿತ್ರಮಂದಿರದ ಮುಂದೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ರೈತರ ಎಚ್ಚರಿಕೆಯ ಬೆನ್ನಲ್ಲೇ ಪರಿಸ್ಥಿತಿಯ ಗಾಂಭೀರ್ಯತೆಯನ್ನು ಅರಿತ ಚಿತ್ರಮಂದಿರದ ಆಡಳಿತ ಮಂಡಳಿಯು, ಮುನ್ನೆಚ್ಚರಿಕಾ ಕ್ರಮವಾಗಿ ಪ್ರದರ್ಶನವನ್ನು ರದ್ದುಗೊಳಿಸಲು ನಿರ್ಧರಿಸಿದೆ.

ಶಾಂತಿ ಕಾಪಾಡಲು ಪೊಲೀಸ್ ಬಂದೋಬಸ್ತ್: ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಚಿತ್ರಮಂದಿರದ ಆವರಣದಲ್ಲಿ ಪೊಲೀಸ್ ಭದ್ರತೆ ಒದಗಿಸಲಾಗಿತ್ತು. ಪ್ರದರ್ಶನ ರದ್ದಾದ ಹಿನ್ನೆಲೆಯಲ್ಲಿ ಸಿನಿಮಾ ವೀಕ್ಷಿಸಲು ಬಂದಿದ್ದ ಪ್ರೇಕ್ಷಕರು ನಿರಾಸೆಯಿಂದ ಹಿಂದಿರುಗಬೇಕಾಯಿತು. ಸದ್ಯ ಸ್ಥಳದಲ್ಲಿ ವಾತಾವರಣ ಶಾಂತಿಯುತವಾಗಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *