ದೇವನಹಳ್ಳಿ: ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ, ವಿದ್ಯಾರ್ಥಿಗಳಿಗೆ ಉತ್ತಮ ವಿದ್ಯಾಭ್ಯಾಸ ಕಲ್ಪಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪ ಅವರು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನನ್ನ ಶಾಲೆ ನನ್ನ ಕೊಡುಗೆಯಡಿಯಲ್ಲಿ ಸಿ.ಎಸ್‌.ಆರ್ ಅನುದಾನದಲ್ಲಿ ಮಾದರಿ ಸರ್ಕಾರಿ ಶಾಲೆ ಯೋಜನೆ ಉದ್ಘಾಟನೆ ಮತ್ತು ನೂತನ ಶಾಲಾ ಕೊಠಡಿಗಳು ಹಾಗೂ ವಿವೇಕ ಶಾಲಾ ಕೊಠಡಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸರ್ಕಾರ ಶ್ರಮಿಸುತ್ತಿದ್ದು, ಹಲವು ಯೋಜನೆಗಳನ್ನು ಜಾರಿಗೆ ತಂದಿದೆ, ಶಾಲಾ ಮಕ್ಕಳಿಗೆ ಬಿಸಿಯೂಟದ ಜೊತೆಗೆ ವಾರಕ್ಕೆ 2 ಮೊಟ್ಟೆ, ಚಿಕ್ಕಿ, ಬಾಳೆಹಣ್ಣು ನೀಡಲಾಗುತ್ತಿದೆ. ಈ ವರ್ಷ ಪಿಯುಸಿ ಫೇಲಾದ ವಿದ್ಯಾರ್ಥಿಗಳಿಗೆ 2 ಪೂರಕ ಪರೀಕ್ಷೆಗಳನ್ನು ನಡೆಸಿದ್ದೆವು. ಇದರ ಪ್ರತಿಫಲವಾಗಿ 4200 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಿದ್ಯಾರ್ಥಿಗಳು ಕಡಿಮೆ ಇರುವ ಶಾಲೆಗಳನ್ನು ಒಂದು ಕಡೆ ಸ್ಥಳಾಂತರಿಸಿ ಎಲ್ಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವುದರಿಂದ ಶಿಕ್ಷಕರ ಹೊರೆ ಕಡಿಮೆ ಮಾಡಬಹುದು ಎಂದರು.

ಸಿ.ಎಸ್.ಆರ್ ಅನುದಾನದಡಿಯಲ್ಲಿ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸಲು ಸರ್ಕಾರದ ಪ್ರಯತ್ನ ಗಳು ಕಾರ್ಯರೂಪದಲ್ಲಿದೆ. 01 ರಿಂದ 12 ನೇ ತರಗತಿಯವರೆಗೆ ಒಂದೇ ಶಾಲೆಯಲ್ಲಿ ವಿದ್ಯಾರ್ಥಿಗಳು ವ್ಯಾಸಂಗ ಮಾಡಲು ಅವಕಾಶ ಕಲ್ಪಿಸಲು ಹಾಗೂ ಮೂಲಭೂತ ಸೌಲಭ್ಯಗಳನ್ನು ಒಳಗೊಂಡ 600 ಕೆ.ಪಿ.ಎಸ್ (ಕರ್ನಾಟಕ ಪಬ್ಲಿಕ್ ಶಾಲೆ)ಶಾಲೆಗಳನ್ನು ಮುಂದಿನ ವರ್ಷದ ವೇಳೆಗೆ ರಾಜ್ಯಾದ್ಯಂತ ಪ್ರಾರಂಭ ಮಾಡಲಾಗುವುದು. ಮುಂದಿನ 5 ವರ್ಷಗಳಲ್ಲಿ ಎರಡು ಗ್ರಾಮಗಳಿಗೆ ಒಂದರಂತೆ 2000 ಕೆ.ಪಿ.ಎಸ್ ಶಾಲೆಗಳನ್ನು ನಿರ್ಮಿಸಲು ಗುರಿ ಹೊಂದಲಾಗಿದೆ ಎಂದು ಸಚಿವರು ಹೇಳಿದರು.

ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ಅವರು ಮಾತನಾಡಿ ಸರ್ಕಾರಿ ಶಾಲೆಗಳಲ್ಲಿ ಹೊಸ ವಾತಾವರಣ ಸೃಷ್ಟಿ ಮಾಡುವ ದೃಷ್ಟಿಯಿಂದ ಹಾಗೂ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಸಿ.ಎಸ್.ಆರ್ ಅನುದಾನದಡಿ ಶಾಲೆಗಳನ್ನು ನವೀಕರಣ ಮಾಡಲಾಗುತ್ತದೆ. ಶಾಲಾ ಕೊಠಡಿ, ಆಟದ ಮೈದಾನ, ಕಂಪ್ಯೂಟರ್ ಸೌಲಭ್ಯ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಶಾಲೆಗೆ ಒದಗಿಸಿ, ಗುಣಮಟ್ಟದ ಶಿಕ್ಷಣ ನೀಡಲಾಗುವುದು. ಇದರಿಂದ ಮಕ್ಕಳ ಮುಂದಿನ ಭವಿಷ್ಯಕ್ಕೆ ಸಹಕಾರಿಯಾಗುತ್ತದೆ ಎಂದು ಹೇಳಿದರು. ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸರ್ಕಾರ ನುಡಿದಂತೆ ನಡೆಯುತ್ತಿದ್ದು 100ದಿನಗಳು ಪೂರೈಸುವುದರೊಳಗಾಗಿ ನಾಲ್ಕು ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದೆ. ಐದನೇ ಯೋಜನೆಯನ್ನೂ ಯಶಸ್ವಿಯಾಗಿ ಜಾರಿಗೊಳಿಸಲಾಗುವುದು ಎಂದರು.
ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೆಪಿಎಸ್ ಶಾಲೆಗಳನ್ನು ಆರಂಭಿಸುವ ಗುರಿ ಹೊಂದಿರುವ ಶಿಕ್ಷಣ ಸಚಿವರ ಯೋಜನೆಗಳನ್ನು ಅವರು ಶ್ಲಾಘಿಸಿದರು.

ಪ್ರೆಸ್ಟೀಜ್, ಎಂಬೆಸ್ಸಿ, ಚಾಂಪಿಯನ್ಸ್ ಗ್ರೂಪ್, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ , ಎಜಾಕ್ಸ್, ಎಕ್ಸೈಡ್ ಬ್ಯಾಟರಿ, ಮುಂತಾದ ಕಂಪನಿಗಳು ಜಿಲ್ಲೆಯ 14 ಶಾಲೆಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಿ ಅಭಿವೃದ್ಧಿ ಪಡಿಸಲು ಮುಂದಾಗಿವೆ. ಈ ಸಂದರ್ಭದಲ್ಲಿ ಸರ್ಕಾರದ ವತಿಯಿಂದ ಕಂಪನಿ ಮುಖ್ಯಸ್ಥರಿಗೆ ಪ್ರಶಂಸನಾ ಪತ್ರ ನೀಡಲಾಯಿತು.

ಕಾರ್ಯಕ್ರಮದಲ್ಲಿ ಹೊಸಕೋಟೆ ವಿಧಾನಸಭಾ ಕ್ಷೇತ್ರ ಶಾಸಕರಾದ ಶರತ್ ಕುಮಾರ್ ಬಚ್ಚೇಗೌಡ, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ ಶಾಸಕರಾದ ಧೀರಜ್ ಮುನಿರಾಜ್, ವಿಧಾನ ಪರಿಷತ್ ಶಾಸಕರಾದ ಎಸ್.ರವಿ, ಅ.ದೇವೇಗೌಡ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ್.ಎನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ‌.ಕೆ.ಎನ್.ಅನುರಾಧ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ವಿಶ್ವನಾಥಪುರ ಗ್ರಾಮ ಪಂಚಾಯತಿ ಅಧ್ಯಕ್ಷರು ವೆಂಕಟಮ್ಮ ದೊಡ್ಡಗಂಗಪ್ಪ, ಉಪಾಧ್ಯಕ್ಷರಾದ ಕಲ್ಪನಾ ನಾರಾಯಣಸ್ವಾಮಿ ಸೇರಿದಂತೆ ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ನಾಮ ನಿರ್ದೇಶಿತ ಸದಸ್ಯರು, ಜಿಲ್ಲಾಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ವರದಿ: ಹೈದರ್‌ ದೇವನಹಳ್ಳಿ

Leave a Reply

Your email address will not be published. Required fields are marked *