ಬೆಂಗಳೂರು: ತಿರುವನಂತಪುರದ ಶಿವಗಿರಿಯ ಮಠದಲ್ಲಿಂದು ಶ್ರೀ ನಾರಾಯಣ ಧರ್ಮಸಂಗಮ ಟ್ರಸ್ಟ್‌ ಆಯೋಜಿಸಿರುವ ಸಮಾವೇಷದಲ್ಲಿ ಪಾಲ್ಗೊಂಡ ಸಿಎಂ ಸಿದ್ದರಾಮಯ್ಯನವರು ತಮ್ಮ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ.

ವೈವಿಧ್ಯತೆಯ ನಡುವೆ ಮನುಷ್ಯರು ಒಗ್ಗಟ್ಟಾಗಿ ಬಾಳುವ ಸಹೃದಯಿ ಭಾರತ ನಿರ್ಮಾಣ ನಾರಾಯಣ ಗುರುಗಳ ಆಶಯವಾಗಿತ್ತು. ನೈತಿಕತೆ ಇಲ್ಲದ ಅಹಂಕಾರದ ಭಾಷೆಯಲ್ಲಿ ಕೋಮುವಾದ ಮಾತಾಡುವ ಬಗ್ಗೆ ನಾರಾಯಣ ಗುರುಗಳು ಎಚ್ಚರಿಸಿದ್ದರು.

ನಾರಾಯಣ ಗುರುಗಳು ಕೇವಲ‌ ಒಬ್ಬ ಸಂತ ಮಾತ್ರ ಆಗಿರಲಿಲ್ಲ. ಸಮಾನತೆ ಮತ್ತು ನೈತಿಕತೆಯ ಚಳವಳಿಯಾಗಿದ್ದರು. ಹೀಗಾಗಿ ಶಿವಗಿರಿ ತೀರ್ಥಯಾತ್ರೆ ಕೂಡ ಚಳವಳಿಯ ಸ್ವರೂಪ ಪಡೆದು ಜಾತಿ ದೌರ್ಜನ್ಯವನ್ನು ಅಳಿಸಿ ಸಮಾಜವನ್ನು ಸಾಮಾಜಿಕ ನ್ಯಾಯದ ಕಡೆ ಮುನ್ನಡೆಸಬೇಕು. ಇದೇ ನಾರಾಯಣ ಗುರುಗಳು ಕಂಡ ಭಾರತ, ಇದೇ ಶಿವಗಿರಿ ಪ್ರತಿಪಾದಿಸುವ ಭಾರತ. ಇಂತಹ ಭಾರತವನ್ನು ನಾವು ಒಟ್ಟಾಗಿ ಗಟ್ಟಿಗೊಳಿಸಬೇಕಿದೆ.

ಶಿವಗಿರಿ ಮಠವು ಕೇವಲ ಒಂದು ಯಾತ್ರಾ ಕೇಂದ್ರವಾಗಿರದೇ, ಭಾರತದ ಆತ್ಮಸಾಕ್ಷಿಯ ನೈತಿಕ ವಿಶ್ವವಿದ್ಯಾಲಯವಾಗಿದೆ. ಈ ಪವಿತ್ರ ಕ್ಷೇತ್ರದಲ್ಲಿ ನಿಮ್ಮ ಮುಂದೆ ನಿಂತಿರುವುದು ನನ್ನ ಸೌಭಾಗ್ಯ. ಇದು ಬೌದ್ಧಿಕ ಮತ್ತು ವಿಶ್ವದ ಮಾನವಕುಲದ ಚಳವಳಿಯಾಗಿದೆ. ಇದು ಭೌಗೋಳಿಕವಲ್ಲ, ನೈತಿಕತೆಯ ಪ್ರವಾಸ.

ರಾಜಕಾರಣ ನೈತಿಕತೆಯಿಂದ ದೂರವಾಗುತ್ತಾ, ಧರ್ಮವು ನೈತಿಕತೆಗಿಂತ ಹೆಚ್ಚಾಗಿ ಅಧಿಕಾರಕ್ಕಾಗಿ ಆಯುಧವಾಗುತ್ತಿರುವ ಅಪಾಯದ ದಿನಗಳಲ್ಲಿ ಶಿವಗಿರಿ ಒಂದು ನೈತಿಕ ಚಳವಳಿಯಾಗಿ ನಮಗೆ ಆದರ್ಶವಾಗಬೇಕು. ಶಿವಗಿರಿ ಮಠ ‘ಜೀವಂತ ಸಂವಿಧಾನ’ದಂತೆ ಕಾರ್ಯನಿರ್ವಹಿಸುತ್ತಿದೆ.

ಶಿವಗಿರಿ ತೀರ್ಥಯಾತ್ರೆಯು ಭಾರತದ ಮೂಲ ‘ಕೋಮು-ವಿರೋಧಿ’ ಯೋಜನೆಯಾಗಿದೆ. ಸಮಾಜವು ಕೃತಕವಾಗಿ ಸೃಷ್ಟಿಸಲ್ಪಟ್ಟ ದ್ವೇಷದಿಂದ ಧ್ರುವೀಕರಣಗೊಳ್ಳುತ್ತಿರುವಾಗ, ಶಿವಗಿರಿಯು ಪ್ರಾಬಲ್ಯಕ್ಕಿಂತ ‘ಸಂವಾದ’ವನ್ನು, ಶ್ರೇಣೀಕೃತ ವ್ಯವಸ್ಥೆಗಿಂತ ‘ಸಮಾನತೆ’ಯನ್ನು ಮತ್ತು ಸಾಂಕೇತಿಕತೆಗಿಂತ ‘ನೈತಿಕತೆ’ಯನ್ನು ಎತ್ತಿ ಹಿಡಿಯುತ್ತದೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *