ಬೆಂಗಳೂರು:ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಜೀವ ಬೆದರಿಕೆ ಹಾಕಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಅವರು ಪ್ರತಿಕ್ರಿಯಿಸಿದ್ದಾರೆ.

ಶಿಡ್ಲಘಟ್ಟ ನಗರದ ರಸ್ತೆಗಳಲ್ಲಿ ಅಕ್ರಮವಾಗಿ ಅಳವಡಿಸಲಾಗಿದ್ದ ಬ್ಯಾನರ್‌ಗಳನ್ನು ಪೌರಾಯುಕ್ತೆ ಅಮೃತಾ ಗೌಡ ನೇತೃತ್ವದಲ್ಲಿ ನಗರಸಭೆ ಸಿಬ್ಬಂದಿ ತೆರವುಗೊಳಿಸಿದ್ದರು.ಇದರಿಂದ ಆಕ್ರೋಶಗೊಂಡ ಕಾಂಗ್ರೆಸ್ ಮುಖಂಡ ಹಾಗೂ ಕಳೆದ ಚುನಾವಣೆಯ ಪರಾಜಿತ ಅಭ್ಯರ್ಥಿ ರಾಜೀವ್ ಗೌಡ, ಪೌರಾಯುಕ್ತೆಗೆ ಫೋನ್ ಮಾಡಿ ಅಶ್ಲೀಲ ಪದಗಳಿಂದ ನಿಂದಿಸಿದ್ದಲ್ಲದೆ, “ಬೆಂಕಿ ಹಾಕಿ ಸುಟ್ಟು ಹಾಕುತ್ತೇನೆ, ಚಪ್ಪಲಿಯಲ್ಲಿ ಹೊಡೆಸುತ್ತೇನೆ ಮತ್ತು ನಗರದಲ್ಲಿ ದಂಗೆ ಎಬ್ಬಿಸುತ್ತೇನೆ” ಎಂದು ಬೆದರಿಕೆ ಹಾಕಿದ್ದಾರೆ ಎಂಬ ಆಡಿಯೋ ವೈರಲ್ ಆಗಿದೆ.

“ಕಾಂಗ್ರೆಸ್ ಆಡಳಿತದಲ್ಲಿ ಮುಖಂಡರ ಗೂಂಡಾಗಿರಿ ಮಿತಿಮೀರಿದೆ. ಒಬ್ಬ ಮಹಿಳಾ ಅಧಿಕಾರಿಗೆ ಈ ರೀತಿ ಬೆದರಿಕೆ ಹಾಕುವುದು ಅಕ್ಷಮ್ಯ,” ಎಂದು ಎಚ್‌ಡಿಕೆ ಕಿಡಿಕಾರಿದ್ದಾರೆ.

ಅಧಿಕಾರಿಗೆ ಜೀವ ಬೆದರಿಕೆ ಹಾಕಿರುವ ರಾಜೀವ್ ಗೌಡ ಅವರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.ಕೆಪಿಸಿಸಿ ರಾಜ್ಯ ಸಂಯೋಜಕರೂ ಆಗಿರುವ ರಾಜೀವ್ ಗೌಡ ಅವರನ್ನು ತಕ್ಷಣವೇ ಕಾಂಗ್ರೆಸ್ ಪಕ್ಷದಿಂದ ವಜಾ ಮಾಡಬೇಕು ಎಂದು ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸವಾಲು ಹಾಕಿದ್ದಾರೆ.

Leave a Reply

Your email address will not be published. Required fields are marked *